Home ಬೆಂಗಳೂರು ಬೆಂಗಳೂರಿಗರೆ ಹುಷಾರ್ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದರೆ 5,000 ದಂಡ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರಿಗರೆ ಹುಷಾರ್ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದರೆ 5,000 ದಂಡ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ದಂಡದ ಮೊತ್ತವನ್ನು ರೂ.5000 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಬೇಸರ ಹೊರಹಾಕಿದ ಸಚಿವರು
ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸಾರ್ವಜನಿಕರ ನಡೆಯುವ ಹಕ್ಕನ್ನು ಖಚಿತಪಡಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ನಗರದಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಐದೂ ಪಾಲಿಕೆಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕೆಲಸಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಹೀಗೆ ಬೀದಿಬದಿ ವ್ಯಾಪಾರಿಗಳಿಂದ ತೆರವಾದ ಜಾಗದಲ್ಲಿ ಯಾವುದೇ ರೀತಿಯ ಮೋಟಾರು ವಾಹನಗಳನ್ನು ಚಲಾಯಿಸುವುದು ಸರಿಯಲ್ಲ. ಇಂತಹ ಕೃತ್ಯಗಳನ್ನು ಸಹಿಸಿಕೊಳ್ಳುವುದೂ ಸಾಧ್ಯವಿಲ್ಲ ಎಂದು ಬೇಸರ ಹೊರಹಾಕಿದರು.

ವಾಹನ ಸವಾರರು ಯಾವುದೇ ಭಯ ಇಲ್ಲದೆ ಒತ್ತುವರಿ ತೆರವಾಗಿರುವ ಪಾದಾಚಾರಿ ಮಾರ್ಗದಲ್ಲಿ ಚಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹಲವರು ಈಗಾಗಲೇ ನನಗೆ ದೂರು ನೀಡಿದ್ದಾರೆ. ಪಾದಾಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವಾಗ ಅಪಘಾತಗಳಾದರೆ ಯಾರು ಹೊಣೆ? ಹೀಗಾಗಿ ಟ್ರಾಫಿಕ್ ಪೊಲೀಸರು ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು. ಅಲ್ಲದೆ, ದಂಡದ ಮೊತ್ತ ಅಧಿಕವಾದರೆ ಮಾತ್ರ ಇಂತಹ ಅಪರಾಧಗಳನ್ನು ತಡೆಯಲು ಸಾಧ್ಯ. ಹೀಗಾಗಿ ಪಾದಾಚಾರಿ ಮಾರ್ಗದಲ್ಲಿ ವಾಹನ ಚಲಾಯಿಸಿದರೆ ಪ್ರಸ್ತುತ ಚಾಲ್ತಿಯಲ್ಲಿರುವ ರೂ.500 ದಂಡವನ್ನು ರೂ.5000ಕ್ಕೆ ಏರಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಸಭೆಯಲ್ಲಿ ಸಚಿವರು ತಿಳಿಸಿದರು.

ಮುಖ್ಯ ರಸ್ತೆಗಳಲ್ಲಿ ಪಾರ್ಕಿಂಗ್ ಕಾನೂನು ಪಾಲಿಸಲು ಸೂಚನೆ:
ಆರ್ಟಿಲಿಯರ್ ಹಾಗೂ ಸಬ್ ಆರ್ಟಿಲಿಯರ್ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇಬಾರದು ಎಂಬುದು ನನ್ನ ಅಭಿಪ್ರಾಯ. ಈ ನಿಯಮವನ್ನು ಜಾರಿಗೊಳಿಸುವುದು ವಾಸ್ತವದಲ್ಲಿ ಕಷ್ಟಸಾಧ್ಯ. ಆದರೆ, ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳನ್ನಾದರೂ ಪಾಲಿಸಿ ಎಂದು ಅವರು ಅಧಿಕಾರಿಗಳನ್ನು ಒತ್ತಾಯಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಆಲ್ಟರ್ನೇಟ್ ಪಾರ್ಕಿಂಗ್” (Alternate Parking) ಅಥವಾ “ಒನ್-ಸೈಡ್ ಪಾರ್ಕಿಂಗ್” (One-Side Parking) ಎಂಬ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಚಾಲ್ತಿಯಲ್ಲಿದೆ. ಆದರೆ, ವಾಹನ ಸವಾರರು ಈ ನಿಯಮವನ್ನು ಪಾಲಿಸುತ್ತಿಲ್ಲ. ತಿಂಗಳ ಎಲ್ಲಾ ದಿನಗಳಲ್ಲೂ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ಮಾಡಲಾಗುತ್ತಿದೆ. ಪರಿಣಾಮ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಉಲ್ಬಣಿಸುತ್ತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮವನ್ನು ಪಾಲಿಸಲು ಇರುವ ಸಮಸ್ಯೆಯಾದರೂ ಏನು? ಎಂದು ಅವರು ಸಭೆಯಲ್ಲಿ ಅಸಮಾಧಾನ ಹೊರಹಾಕಿದರು.

ಚಾಲ್ತಿಯಲ್ಲಿರುವ ನಿಯಮ ಪಾಲನೆಗೆ ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬೇಕಿಲ್ಲ. ಇನ್ನಾದರೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಪರ್ಯಾಯ ಪಾರ್ಕಿಂಗ್ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ. ಪ್ರತಿದಿನ ರಸ್ತೆಯ ಒಂದು ಬದಿಯಲ್ಲಿ ಕನಿಷ್ಟ 7 ರಿಂದ 8 ಅಡಿ ಜಾಗ ಉಳಿಯಲಿದೆ. ವಾಹನ ಸವಾರರಿಗೂ ಇದರಿಂದ ಅನುಕೂಲವಾಗಲಿದ್ದು, ವಾಹನ ದಟ್ಟಣೆಯನ್ನು ಒಂದು ಹಂತಕ್ಕೆ ನಿಯಂತ್ರಿಸಬಹುದು ಎಂದರು.

ಜನರಿಗೆ ಅರಿವು ಮೂಡಿಸದೆ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಲಕ್ಷಾಂತರ ಕೋಟಿ ಹಣ ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಹೀಗಾಗಿ ವಾಹನ ನಿಲುಗಡೆ ನಿಯಮಗಳ ಬಗ್ಗೆ ಮೊದಲು ಜನರಲ್ಲಿ ಅರಿವು ಮೂಡಿಸಿ. ನಗರದ ಮುಖ್ಯರಸ್ತೆಗಳಲ್ಲಿ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸಭೆಯಲ್ಲಿ ತಾಕೀತು ಮಾಡಿದರು.

You cannot copy content of this page

Exit mobile version