Home ಅಪರಾಧ ಬಿಹಾರದ ಜಮುಯಿ ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಎನ್‌ಕೌಂಟರ್‌ನಲ್ಲಿ ಪ್ರಮುಖ ಆರೋಪಿ ನಂದನ್ ಯಾದವ್‌ಗೆ ಗಾಯ

ಬಿಹಾರದ ಜಮುಯಿ ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಎನ್‌ಕೌಂಟರ್‌ನಲ್ಲಿ ಪ್ರಮುಖ ಆರೋಪಿ ನಂದನ್ ಯಾದವ್‌ಗೆ ಗಾಯ

0

ಜಮುಯಿ (ಬಿಹಾರ): ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣದ ಪ್ರಮುಖ ಆರೋಪಿ ನಂದನ್ ಯಾದವ್ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕಾಲಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ.

ಸೆಪ್ಟೆಂಬರ್ 19 ರಂದು ರಾತ್ರಿ ವೇಳೆ ಬಾಲಕ ಮತ್ತು ಬಾಲಕಿ ಕೋಚಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರನ್ನು ಅಡ್ಡಗಟ್ಟಿತ್ತು. ಬಾಲಕಿಯ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ದುಷ್ಕರ್ಮಿಗಳು, ಅದನ್ನು ತಡೆಯಲು ಬಂದ ಜೊತೆಗಿದ್ದ ಹುಡುಗನ ಮೇಲೂ ತೀವ್ರ ಹಲ್ಲೆ ನಡೆಸಿದ್ದರು. ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದರು.

ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಪ್ರಮುಖ ಆರೋಪಿ ನಂದನ್ ಯಾದವ್ ತಲೆಮರೆಸಿಕೊಂಡಿದ್ದ. ಆತ ಅಡಗಿರುವ ಸ್ಥಳದ ಮಾಹಿತಿ ಪಡೆದ ಪೊಲೀಸರು ಆತನನ್ನು ಸೆರೆಹಿಡಿಯಲು ಮುಂದಾದಾಗ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ನಂದನ್ ಯಾದವ್‌ನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ನಂದನ್ ಯಾದವ್ ಹಲವು ಅಕ್ರಮ ಚಟುವಟಿಕೆಗಳಲ್ಲೂ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪರಾರಿಯಾಗಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

You cannot copy content of this page

Exit mobile version