ದೆಹಲಿ: ವಿಧಾನಸಭಾ ಚುನಾವಣೆಗೆ ಮುನ್ನ ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ಆಮ್ ಆದ್ಮಿ ಪಕ್ಷ ವಿರೋಧಿಸಿದೆ.
ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತೆ ತನ್ನ ಕೊಳಕು ರಾಜಕೀಯವನ್ನು ಪ್ರಾರಂಭಿಸಿದೆ ಎಂದು ಎಎಪಿ ವಕ್ತಾರೆ ಪ್ರಿಯಾಂಕಾ ಕಕ್ಕರ್ ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ಜಾಮೀನು ನೀಡಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ತನಿಖೆ ನಡೆಸುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು ಎಂದು ಅವರು ಆರೋಪಿಸಿದ್ದಾರೆ.
“ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರಿಗೆ ಜಾಮೀನು ನೀಡಿದೆ. ಎರಡು ವರ್ಷಗಳ ನಂತರ, ಕೇಂದ್ರ ಸರ್ಕಾರವು ಮತ್ತೆ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ನಡೆಸಲು ಅನುಮತಿ ನೀಡಿದೆ. ಅದೂ ಚುನಾವಣೆಗೂ ಮುನ್ನ. ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಎಎಪಿ ನಾಯಕರ ಮಾನಹಾನಿ ಮಾಡುವುದು ಬಿಜೆಪಿಗೆ ದಿನಚರಿಯಾಗಿದೆ ಎನ್ನುವುದನ್ನು ಜನರು ಈಗ ಅರ್ಥಮಾಡಿಕೊಂಡಿದ್ದಾರೆ” ಎಂದು ಪ್ರಿಯಾಂಕಾ ಹೇಳಿದರು.