ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆ ಲಿಂಗಸುಗೂರಿನಿಂದ ಆರಂಭ

ಲಿಂಗಸುಗೂರು (ರಾಯಚೂರು): ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ, ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ 10 ದಿನಗಳ ಬೃಹತ್ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಮಂಗಳವಾರ ಚಾಲನೆ ನೀಡಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಶಾಸಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವತಂತ್ರವಾಗಿ ಆಡಳಿತ ನಡೆಸುವ ಅಧಿಕಾರವಿದೆಯೇ? ಪ್ರತಿಯೊಂದು ವಿಷಯಕ್ಕೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲಿಗೆ ಬೀಳಬೇಕಾದ ಸ್ಥಿತಿ ಬಂದಿದೆ. ಇದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವ ಕೆಲಸವೇ? ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿ, “ಕಾಂಗ್ರೆಸ್ ಸರ್ಕಾರವು ದಲಿತ ವಿರೋಧಿ, ರೈತ ವಿರೋಧಿ, ಬಡವರ, ಯುವಕರ ಹಾಗೂ ಮಹಿಳಾ ವಿರೋಧಿ ಸರ್ಕಾರವಾಗಿದೆ. ಈ ಭ್ರಷ್ಟ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವ ಸಂಕಲ್ಪದೊಂದಿಗೆ ಲಿಂಗಸುಗೂರಿನಿಂದ ನಮ್ಮ ಹೋರಾಟವನ್ನು ಆರಂಭಿಸಿದ್ದೇವೆ” ಎಂದು ಗುಡುಗಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಕೇವಲ ಮೂರು ತಿಂಗಳಲ್ಲೇ ಸಚಿವ ಬಿ. ನಾಗೇಂದ್ರ ಅವರ ವಿಕೆಟ್ ಪತನವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಲೇವಡಿ ಮಾಡಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರದ ಭ್ರಷ್ಟಾಚಾರವನ್ನು ಜನರ ಮುಂದಿಡಲು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಈ ಪಾದಯಾತ್ರೆಯು ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಕ್ರಮಿಸಿ ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ.

Related Articles

ಇತ್ತೀಚಿನ ಸುದ್ದಿಗಳು