ಹೊಸದೆಹಲಿ: ಮಧ್ಯಪ್ರದೇಶ ರಾಜ್ಯದ ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯ, ಅಜಯ್ ಪ್ರತಾಪ್ ಸಿಂಗ್ ಅವರು ಶನಿವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ X ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಜೊತೆಗೆ ಪಕ್ಷದಲ್ಲಿ ‘ದೊಡ್ಡ ಪ್ರಮಾಣದ ಭ್ರಷ್ಟಾಚಾರ’ ನಡೆಯುತ್ತಿದೆ ಜೊತೆಗೆ ಭ್ರಷ್ಟರಿಗೆ ರಕ್ಷಣೆ ಸಿಗುತ್ತಿದ್ದು ಪಕ್ಷವು ರಾಜಕೀಯ ವ್ಯಾಪಾರಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ ಎಂದು ಸಿಂಗ್ ಹೇಳಿದ್ದಾರೆ.
ಅಜಯ್ ಪ್ರತಾಪ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಈ ದಿನ ಬೆಳಗ್ಗೆ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರವನ್ನು ಅವರು ಪೋಸ್ಟ್ ಮಾಡಿದ್ದಾರೆ.
ಸಿಂಗ್ ತಮ್ಮ ಮುಂದಿನ ನಿರ್ಧಾರದ ಕುರಿತು ಏನೂ ಹೇಳಿಲ್ಲವಾದರೂ ಕಾಂಗ್ರೆಸ್ ಸೇರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.