ಚಂಡೀಗಢ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ಅವರಿಗೆ ಪಕ್ಷ ಎಚ್ಚರಿಕೆ ನೀಡಿದೆ.
ಹರಿಯಾಣ ವಿಧಾನಸಭಾ ಚುನಾವಣೆಗೂ ಮುನ್ನ ಅವರ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಸೂಚಿಸಿದೆ. ಕಳೆದ ವರ್ಷ ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಯ ನೇತೃತ್ವವನ್ನು ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ವಹಿಸಿದ್ದರು. ಇಬ್ಬರೂ ಸೆಪ್ಟೆಂಬರ್ 6ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಅವರು ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಏತನ್ಮಧ್ಯೆ, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಗ್ಗೆ ಬ್ರಿಜ್ ಭೂಷಣ್ ಪ್ರತಿಕ್ರಿಯಿಸಿದ್ದಾರೆ. ʼವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದುಕೊಂಡರೆ ತಪ್ಪಾಗುತ್ತದೆ. ಅವರು ಹರಿಯಾಣದ ಯಾವುದೇ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಬಹುದು. ಆದರೆ ಸಣ್ಣ ಪ್ರಮಾಣದ ಬಿಜೆಪಿ ಅಭ್ಯರ್ಥಿ ಅವರನ್ನು ಸೋಲಿಸುತ್ತಾರೆ’ ಎಂದರು.
ಮತ್ತೊಂದೆಡೆ, ಕಾಂಗ್ರೆಸ್ ಸೇರಿದ ನಂತರ ಕುಸ್ತಿಯಲ್ಲಿ ಖ್ಯಾತಿ ಪಡೆದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಣ್ಮರೆಯಾಗುತ್ತಾರೆ ಎಂದು ಬ್ರಿಜ್ ಭೂಷಣ್ ಟೀಕಿಸಿದರು. ‘ಅವರು (ಪುನಿಯಾ, ಫೋಗಟ್) ಆಟದ ಕಾಯಿಗಳು. ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬದವರು ಇವರನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕುಸ್ತಿ ಒಕ್ಕೂಟದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಮತ್ತು ಅದರ ಸಿದ್ಧಾಂತದ ಮೇಲೆ ದಾಳಿ ಮಾಡಲು ಇದೆಲ್ಲ ಸಂಚುಗಳನ್ನು ರೂಪಿಸಲಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸೇರಿದಂತೆ ಈ ಗುಂಪು ಈ ಕೆಲಸಗಳನ್ನು ಮಾಡುತ್ತಿದೆ’ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಎಚ್ಚರಿಕೆ ನೀಡಿದೆ.
ಇತ್ತೀಚೆಗೆ ಕಂಗನಾ ರಣಾವತ್ ಅವರಿಗೂ ಬಿಜೆಪಿ ಯಾವುದೇ ಹೇಳಿಕೆ ನೀಡದ ಹಾಗೆ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಅವರೂ ರೈತ ಹೋರಾಟದ ಕುರಿತು ವಿವಾದಸ್ಪದ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.