ಬೆಂಗಳೂರು: ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ನಿನ್ನೆಯಷ್ಟೇ ನ್ಯಾಯಾಲಯವು ಅವರನ್ನು ಎರಡು ದಿನಗಳ ಕಾಲ ಇ.ಡಿ. ಕಸ್ಟಡಿಗೆ ಒಪ್ಪಿಸಿತ್ತು.
ಆದರೆ, ಕಸ್ಟಡಿಯಲ್ಲಿದ್ದಾಗ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟದ ತೊಂದರೆ ಮತ್ತು ಮಧುಮೇಹದಿಂದ ಬಳಲುತ್ತಿರುವ ಕಾರಣ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸತೀಶ್ ಸೈಲ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.