ದರ್ಶನ್ ಗೆ ಜಾಮೀನು ಮಂಜೂರು ; ಇಂದೇ ಬಿಡುಗಡೆ ಆಗುವ ಸಾಧ್ಯತೆ
ಲಿಂಕ್ ನಕಲಿಸಲಾಗಿದೆ ✓
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಐದು ತಿಂಗಳಿಂದ ಜೈಲುವಾಸ ಅನುಭವಿಸುತ್ತಿದ್ದ ನಟ ದರ್ಶನ್ಗೆ ಕೊನೆಗೂ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹಲವು ದಿನಗಳಿಂದ ಅನಾರೋಗ್ಯದ ಕಾರಣದಿಂದ ಜಾಮೀನು ಮಂಜೂರಿಗೆ ಮೊರೆ ಹೋಗಿದ್ದ ದರ್ಶನ್ ಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.
ಇತ್ತೀಚಿನ ಕೆಲವು ದಿನಗಳಲ್ಲಿ ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಎದುರಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದ್ದು, ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸಧ್ಯ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಚಿಕಿತ್ಸೆಯ ಗಂಭೀರ ಸಮಸ್ಯೆಗಳ ಆಧಾರದಲ್ಲಿ ಹೈಕೋರ್ಟ ದರ್ಶನ್ ಗೆ ತಾತ್ಕಾಲಿಕ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ನ ಆದೇಶ ಜೈಲಿನ ಅಧಿಕಾರಿಗಳಿಗೆ ತಲುಪಿಸಿದ ತಕ್ಷಣ ದರ್ಶನ್ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ