ಎಲ್ಕೆಜಿಯಿಂದ 12ನೇ ತರಗತಿವರೆಗೆ ಫ್ರೀ ನೋಟ್ಬುಕ್ – ಸಚಿವ ಮಧು ಬಂಗಾರಪ್ಪ
ಲಿಂಕ್ ನಕಲಿಸಲಾಗಿದೆ ✓
ರಾಯಚೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ (school) ಎಲ್ಜಿಯಿಂದ 12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ (students) ಉಚಿತವಾಗಿ ನೋಟ್ಬುಕ್ ವಿತರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಎಲ್ಕೆಜಿಯಿಂದ 12ನೇ ತರಗತಿವರೆಗೂ ನೋಟ್ಬುಕ್ ಫ್ರೀ!
ನಗರದ ಕೃಷಿ ವಿಶ್ವವಿದ್ಯಾಲಯದ ಬಸವೇಶ್ವರ ಸಭಾಂಗಣದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 2026-27ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಗುಣಾತ್ಮಕ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡಿದ್ದ ‘ಮಿಷನ್ 40 + ಸಂಕಲ್ಪ 2.0’ ವಿಭಾಗಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಜಿಯಿಂದ 12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲು ಸರ್ಕಾರ ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು ಎಂಬುದನ್ನು ಪೋಷಕರೇ ಆಯ್ಕೆ ಮಾಡಿ!
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮುಂದಿನ ಜೂನ್ನಿಂದ ಕನ್ನಡದ ಜತೆಗೆ ಆಂಗ್ಲ ಮಾಧ್ಯಮವನ್ನೂ (ದ್ವಿಭಾಷಾ ಮಾಧ್ಯಮ) ಜಾರಿಗೆ ತರಲಾಗುವುದು. ಆಂಗ್ಲ ಮಾಧ್ಯಮ ಕಡ್ಡಾಯವಲ್ಲ. ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು ಎಂಬುದನ್ನು ಪೋಷಕರೇ ಆಯ್ಕೆ ಮಾಡಿಕೊಳ್ಳಬಹುದು. ಆದರೆ ಕನ್ನಡ ಭಾಷೆ ಕಡ್ಡಾಯವಾಗಿರಲಿದೆ. ಈಗಾಗಲೇ 18ರಿಂದ 19 ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ ಎಂದರು.
ರಾಜ್ಯದಲ್ಲಿ 1,300ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಎಡಿಬಿ ನೆರವಿನಡಿ 500, ಕಲ್ಯಾಣ ಕರ್ನಾಟಕದ ಅಕ್ಷರ ಅವಿಷ್ಕಾರ ನಿಧಿಯಡಿ 200, ಅಲ್ಪಸಂಖ್ಯಾತರ ಇಲಾಖೆಯಿಂದ 200 ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ 300ಕ್ಕೂ ಹೆಚ್ಚು ಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ. ಎಲ್ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ ಉದ್ದೇಶ ಹೊಂದಲಾಗಿದೆ. ಜೂನ್ 1ರಿಂದ ಎಲ್ಲ ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕಾಗಿ 5ರಿಂದ 7 ಕಿ.ಮೀ. ವ್ಯಾಪ್ತಿಯ ಮಾರ್ಗಗಳ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
36 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ!
ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು. ಅನುದಾನಿತ ಶಾಲೆಗಳಿಗೆ 5,500ರಿಂದ 6 ಸಾವಿರ ಶಿಕ್ಷಕರ ನೇಮಕಾತಿ ನಡೆಯುತ್ತಿದೆ. ಪಿಯುಸಿ ಸೇರಿದಂತೆ ಒಟ್ಟು 36 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ