Home ರಾಜ್ಯ ಚಂದ್ರಶೇಖರನಾಥ ಸ್ವಾಮಿಯವರನ್ನು ಠಾಣೆಗೆ ಕರೆಯುವ ಮೂಲಕ ಕಾಂಗ್ರೆಸ್ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ...

ಚಂದ್ರಶೇಖರನಾಥ ಸ್ವಾಮಿಯವರನ್ನು ಠಾಣೆಗೆ ಕರೆಯುವ ಮೂಲಕ ಕಾಂಗ್ರೆಸ್ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ: ವಿಜಯೇಂದ್ರ

0

ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮಿಯವರು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು, ಆದರೆ ಕಾಂಗ್ರೆಸ್‌ ಸರ್ಕಾರ ಇದನ್ನು ಇನ್ನಷ್ಟು ಲಂಬಿಸುವ ಮೂಲಕ ನೀಚ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ‌ ಎಂದು ಅವರು ಆರೋಪಿಸಿದ್ದಾರೆ.

ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ. ಪೂಜ್ಯ ಶ್ರೀಗಳು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಲೇ ಇದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಮ ಪೂಜ್ಯ ಚಂದ್ರಶೇಖರನಾಥ ಶ್ರೀಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮಿ ಮುಸ್ಲಿಮರ ಮತದಾನದ ಹಕ್ಕಿನ ಕುರಿತಾಗಿ ವಿವಾದಾಸ್ಪದವಾಗಿ ಮಾತನಾಡಿದ್ದರು. ನಿಖಿಲ್‌ ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಅವರ ಮಾತು ಬಹಳಷ್ಟು ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಸ್ವಾಮಿ ಈ ಕುರಿತು ವಿಷಾದ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಆದರೆ ಈ ನಡುವೆ ಅವರ ಹೇಳಿಕೆ ಕುರಿತು ದೂರು ದಾಖಲಾಗಿದ್ದ ಕಾರಣ ಪೊಲೀಸರು ಸ್ವಾಮಿಗೆ ನೋಟೀಸ್‌ ನೀಡಿದ್ದರು.

You cannot copy content of this page

Exit mobile version