Monday, October 6, 2025

ಸತ್ಯ | ನ್ಯಾಯ |ಧರ್ಮ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಅವಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿದ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆಯ ಮೂಲಕ ಈ ಉನ್ನತ ಸ್ಥಾನಕ್ಕೇರಿದವರು. ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಮನುವಾದಿಗಳ ಮನಸ್ಸಿನಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಈ ಘಟನೆಯು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎಂಬುದನ್ನು ಅವರ ಗಮನಕ್ಕೆ ತರಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಈ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎಂಬುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page