ದೆಹಲಿ: ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.
1957ರ ಮೇ 4ರಂದು ಜನಿಸಿದ ಸಿ.ಪಿ. ರಾಧಾಕೃಷ್ಣನ್ ಅವರು ತಮಿಳುನಾಡಿನ ಕೊಯಂಬತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2016 ರಿಂದ 2019ರವರೆಗೆ ಆಲ್ ಇಂಡಿಯಾ ಕಾಯರ್ ಬೋರ್ಡ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ.
2023ರ ಫೆಬ್ರವರಿ 18ರಿಂದ ಜಾರ್ಖಂಡ್ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ತೆಲಂಗಾಣ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಹೆಚ್ಚುವರಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಪ್ರಸ್ತುತ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ.
ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಎನ್‌ಡಿಎ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಹಿಸಿದ್ದವು. ನಾಮಪತ್ರ ಸಲ್ಲಿಸಲು ಈ ತಿಂಗಳ 21 ಕೊನೆಯ ದಿನವಾಗಿದೆ.