ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿಂದು ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದರು.
ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಜನರಲ್ಲಿ ಆಕ್ರೋಶವಿದೆ ಎಂದರು. ರಾಜ್ಯ ಸರ್ಕಾರಗಳು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸಬೇಕು. ಈ ಕುರಿತು ಶೀಘ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ನಡೆಯುತ್ತಿರುವ ದೊಡ್ಡ ಪ್ರಮಾಣದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ.
‘ಇಂದು ನಾನು ಕೆಂಪು ಕೋಟೆಯಿಂದ ಮತ್ತೊಮ್ಮೆ ನನ್ನ ನೋವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲಿನ ದಾಳಿಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದನ್ನು ರಾಷ್ಟ್ರ, ಸಮಾಜ ಮತ್ತು ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರ ಮೇಲಿನ ಹಲ್ಲೆ ಪ್ರಕರಣಗಳನ್ನು ಶೀಘ್ರ ತನಿಖೆ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ನಂಬಿಕೆ ಹೆಚ್ಚುತ್ತದೆʼ ಎಂದು ಮೋದಿ ಹೇಳಿದರು.