ಬೆಂಗಳೂರು : ‘ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ 15 ದಿನಗಳ ಕಾಲ ಜಾತಿ ಗಣತಿ ಮರು ಸಮೀಕ್ಷೆ (Caste Census Resurvey) ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಪ್ರಸ್ತಾವನೆ ಸಲ್ಲಿಸಿದೆ’ ಎಂದರು.
ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದೇ ಈ ಗಣತಿಯ ಮುಖ್ಯ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಇರುವ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದ್ಯಾ ಇಲ್ವಾ, ವಾರ್ಷಿಕ ಆದಾಯ ಏನು? ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಹೀಗೆ ಸಮಗ್ರ ಸಮೀಕ್ಷೆ ನಡೆಸುತ್ತೇವೆ. ಈ ಸಮೀಕ್ಷೆ ವರದಿಯ ಆಧಾರದ ಮೇಲೆ ಮುಂದಿನ ಬಜೆಟ್ ಸಿದ್ದಪಡಿಸುತ್ತೇವೆ. ಈ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಮೀಕ್ಷೆ ಹೇಗೆ ನಡೆಯುತ್ತಿದೆ ಎಂದು ಪರಿಶೀಲಿಸಲು ಮೇಲುಸ್ತುವಾರಿ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದೆ.
ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಹಿಂದುಳಿದ ವರ್ಗಗಳ ಸಚಿವ ಶಿವರಾಜ ತಂಗಡಗಿ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.