ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದ್ದು, ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.
ಈ ಶಿಫಾರಸಿನ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆ ನಡೆಯಲಿದ್ದು, ಅಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ದೆಹಲಿಯ CWMA ಕಚೇರಿಯಲ್ಲಿ ಅಧ್ಯಕ್ಷ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ಬೆಳಗ್ಗೆ ನಡೆದ ಸಭೆಯಲ್ಲಿ ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಅಧಿಕಾರಿಗಳು ವಿವರಿಸಿದರು. ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಮಹೇಶ್ ಸಭೆಯಲ್ಲಿ ಖುದ್ದು ಹಾಜರಿದ್ದರು.
ತಮಿಳುನಾಡಿನ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಸ್ತುತ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಮುಂದಿನ ದಿನಗಳಲ್ಲಿನ ಮಳೆಯ ಮುನ್ಸೂಚನೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ CWRC ಈ ಶಿಫಾರಸು ಮಾಡಿದೆ.
