ದೇಶ ತಲೆತಗ್ಗಿಸುವಂತೆ ಮಾಡಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಕುರಿತಾದ ವಿಚಾರಣೆಗಳು ಪಕ್ಕದ ಅಸ್ಸಾಮ್ ಕೋರ್ಟಿನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಕೇಂದ್ರ ಗೃಹ ಸಚಿವಾಲಯವು ಮೈತೇಯಿ ಮತ್ತು ಕುಕಿ ಎರಡೂ ಗುಂಪುಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಮಣಿಪುರವನ್ನು ಸಹಜ ಸ್ಥಿತಿಗೆ ತರಲು ಮಾತುಕತೆ ಮುಂದುವರಿದ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಜನಾಂಗೀಯ ಹಿಂಸಾಚಾರವು 160 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಮೇ 4 ರಂದು ಇಬ್ಬರು ಮಹಿಳೆಯರನ್ನು ಒಳಗೊಂಡ ಘಟನೆಯ ವೀಡಿಯೊ ಈ ತಿಂಗಳ ಆರಂಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಯಿತು.
ಈ ನಡುವೆ ಸಂಸತ್ತಿನಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಪ್ರಧಾನಿ ಮಾತನಾಡಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಧರಣಿ ಮುಂದುವರೆದಿದೆ. ಇಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷದ ಸಂಸದರೆಲ್ಲರೂ ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಹಾಜರಾಗಿದ್ದರು.