ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ, ಮೈಸೂರಿನಲ್ಲಿರುವ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಈ ಕಾರ್ಯಾಚರಣೆಯ ವೇಳೆ ಪೊಲೀಸರು ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿಯ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಮೈಸೂರಿನ ಗುಂಡೂರಾವ್ ನಗರದಲ್ಲಿರುವ ಸ್ನೇಹಮಯಿ ಕೃಷ್ಣ ಅವರ ಮನೆ ಮತ್ತು ಕಚೇರಿ ಸೇರಿದಂತೆ ಬಂಡೀಪಾಳ್ಯದ ಮತ್ತೊಂದು ನಿವಾಸದ ಮೇಲೆಯೂ ದಾಳಿ ನಡೆಸಿ ಜಾಲಾಡಿದ್ದಾರೆ. ಸುದೀರ್ಘ ಪರಿಶೀಲನೆಯ ನಂತರ ಕಡತಗಳು, ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಹಾಗೂ ಸ್ಕ್ಯಾನರ್‌ಗಳನ್ನು ತನಿಖೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಈ ಕ್ರಮದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರ ಪತ್ನಿ ವಿನೋದಾ, “ಪೊಲೀಸರು ಸರ್ಚ್ ವಾರೆಂಟ್ ತೋರಿಸಿಯೇ ಮನೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ. ಪತಿಯ ಬಗ್ಗೆ ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಮಾಹಿತಿ ನೀಡಿದ್ದೇನೆ. ಮನೆಯಲ್ಲಿದ್ದ ಸ್ಕ್ಯಾನರ್ ಮತ್ತು ದಾಖಲೆಗಳನ್ನು ಅವರು ತೆಗೆದುಕೊಂಡು ಹೋಗಿದ್ದಾರೆ” ಎಂದು ತಿಳಿಸಿದ್ದಾರೆ.
ಈ ದಾಳಿಗೆ ಮೂಲ ಕಾರಣ ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಫೆಬ್ರವರಿ 18ರಂದು ನೀಡಿದ ದೂರು ಎನ್ನಲಾಗಿದೆ. ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಎಂದು ನಟೇಶ್ ಅವರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಿದ್ದ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಸದ್ಯ ಬೆಂಗಳೂರಿನ ಆಡುಗೋಡಿಯಲ್ಲಿರುವ ತಾಂತ್ರಿಕ ವಿಭಾಗದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
