ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಅ. 2ರಂದು ಮುಂಬೈನಲ್ಲಿ ಸಿಜೆಪಿ ಪ್ರತಿಭಟನೆ, ಇಂದು ಇಂಡಿಯಾ ಒಕ್ಕೂಟ ಸಭೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆಯನ್ನು ತೀವ್ರಗೊಳಿಸಿವೆ.ಇದರ ಭಾಗವಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 2 ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಮುಂಬೈನ ಶಿವಾಜಿ ಪಾರ್ಕ್ ಗೇಟ್ ನಂಬರ್ 6 ರ ಬಳಿ ಅಕ್ಟೋಬರ್ 2 ರ ಸಂಜೆ ಪ್ರತಿಭಟನೆ ನಡೆಸಲಾಗುವುದು ಎಂದು ಸಿಜೆಪಿ ಘೋಷಿಸಿದೆ. ‘ಮುಂಬೈ ಚಲೋ.. ಗದ್ದಾರ್ ಜ್ಞಾನು ಮಸ್ಟ್ ಗೋ’ ಎಂದು ಸಿಜೆಪಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕರೆ ನೀಡಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿ ಸಹ-ಸಂಚಾಲಕ ಅಶುತೋಷ್ ರಾಂಕಾ ಸ್ಪಷ್ಟಪಡಿಸಿದ್ದಾರೆ.ಮತದಾರರ ಪಟ್ಟಿಗಳಿಂದ ಕೋಟ್ಯಂತರ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ಆರೋಪಿಸಿರುವ ಅವರು, ಈ ಬಗ್ಗೆ ಜ್ಞಾನೇಶ್ ಕುಮಾರ್ ಮಾಧ್ಯಮಗಳು ಮತ್ತು ಸಾರ್ವಜನಿಕರ ಮುಂದೆ ಬಂದು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಜಂಟಿ ಹೋರಾಟದ ಕಾರ್ಯತಂತ್ರ ರೂಪಿಸಲು ಇಂಡಿಯಾ ಒಕ್ಕೂಟದ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದೇಶವ್ಯಾಪಿ ಹಮ್ಮಿಕೊಳ್ಳಬೇಕಾದ ಪ್ರತಿಭಟನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು (ಇಂಪೀಚ್‌ಮೆಂಟ್) ಸಂಸತ್ತಿನ ಉಭಯ ಸದನಗಳಲ್ಲಿ ನಿರ್ಣಯ ಮಂಡಿಸುವ ಸಂಬಂಧ ಕರಡು ನೋಟಿಸ್ ಈಗಾಗಲೇ ಸಿದ್ಧವಾಗಿದ್ದು, ಈ ಸಭೆಯಲ್ಲಿ ಚರ್ಚಿಸಿ ಅಂತಿಮ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್, ಟಿಎಂಸಿ ನಾಯಕರಾದ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಸಮಾಜವಾದಿ ಪಕ್ಷ, ಸಿಪಿಐ, ಸಿಪಿಎಂ, ಎನ್‌ಸಿಪಿ (ಶರದ್ ಪವಾರ್ ಬಣ), ಶಿವಸೇನೆ (ಯುಬಿಟಿ) ಮುಂತಾದ ಪಕ್ಷಗಳ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದೇ ವಿವಾದಕ್ಕೆ ಸಂಬಂಧಿಸಿದಂತೆ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಎಡಪಕ್ಷಗಳ ಮುಖಂಡರು ಮಂಗಳವಾರ ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿದರು. ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಬೃಂದಾ ಕಾರಟ್, ಸಿಪಿಐ(ಎಂಎಲ್) ಲಿಬರೇಷನ್ ಕೇಂದ್ರೀಯ ಸಮಿತಿ ಸದಸ್ಯರಾದ ಸುಚೇತಾ ಡೇ, ಶ್ವೇತಾ ರಾಜ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. “ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಇಲ್ಲವೇ ಅವರನ್ನು ವಜಾಗೊಳಿಸಬೇಕು, ಅವರು ಹುದ್ದೆಯಲ್ಲಿ ಮುಂದುವರಿಯುವುದನ್ನು ಒಪ್ಪುವುದಿಲ್ಲ” ಎಂದು ಮುಖಂಡರು ಆಗ್ರಹಿಸಿದರು.ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಸಿಪಿಎಂ, ಸಿಪಿಐ, ಸಿಪಿಐ(ಎಂಎಲ್) ಲಿಬರೇಷನ್, ಆರ್‌ಎಸ್‌ಪಿ ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷಗಳು ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ ಅಕ್ಟೋಬರ್ 2 ರವರೆಗೆ ನಿರಂತರ ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ.

ಮತ್ತೊಂದೆಡೆ, ಕೇಂದ್ರ ಚುನಾವಣಾ ಆಯೋಗವು 2023 ರಿಂದ ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಮತ್ತು ಅವುಗಳ ಪರಿಣಾಮಗಳ ಕುರಿತು ಸಮಗ್ರ ತನಿಖೆ ನಡೆಸಲು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು ಹಾಗೂ ಆ ವರದಿಯನ್ನು ಸುಪ್ರೀಂ ಕೋರ್ಟ್ ಮುಂದೆ ಇಡಬೇಕು ಎಂದು ನಟ ಪ್ರಕಾಶ್ ರಾಜ್ ಸೋಮವಾರ ಮಂಗಳೂರಿನಲ್ಲಿ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಸಭೆಯಲ್ಲಿ ಆಗ್ರಹಿಸಿದರು.ಎಸ್‌ಐಆರ್ ಪ್ರಕ್ರಿಯೆಯು ದುರುದ್ದೇಶಪೂರಿತ ಎಂಬುದು ಸಾಬೀತಾದರೆ, ಆ ಪ್ರಕ್ರಿಯೆಯ ನಂತರ ನಡೆದ ಎಲ್ಲಾ ಚುನಾವಣೆಗಳನ್ನು ಅಸಿಂಧು ಎಂದು ಸುಪ್ರೀಂ ಕೋರ್ಟ್ ಘೋಷಿಸಬೇಕು ಎಂದು ಅವರು ಮನವಿ ಮಾಡಿದರು.ಆಡಳಿತಾರೂಢ ಬಿಜೆಪಿಗೆ ಮತ ಹಾಕದ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲು ಈ ಪ್ರಕ್ರಿಯೆ ನಡೆಸಲಾಗುತ್ತಿದೆಯೇ ಎಂಬ ಗಂಭೀರ ಸಂಶಯ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು