ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮುನಿರತ್ನ ಅರೆಸ್ಟ್ ಆಗುತ್ತಿದ್ದಂತೆಯೇ ಮುಂಜಾಗ್ರತೆಯ ಆರೋಗ್ಯ ತಪಾಸಣೆಗೆ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಈ ವೇಳೆ ಅವರಿಗೆ ಕೆಲವು ಹೃದಯ ಸಂಬಂಧಿ ಖಾಯಿಲೆ ಇರುವ ಬಗ್ಗೆ ಪೊಲೀಸರಿಗೆ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಆಡಿಯೋ ವೈರಲ್ ಆದ ಬೆನ್ನಲ್ಲೇ ಮುನಿರತ್ನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.
ಬಳಿಕ ಜಡ್ಜ್ ಮುಂದೆ ಹಾಜರು ಪಡಿಸಿದ್ದಾಗ, ತಮಗೆ ಹೃದಯ ಸಂಬಂಧಿ, ಹರ್ನಿಯಾ, ಡಯಾಬಿಟಿಸ್ ಸಮಸ್ಯೆ ಇದೆ ಎಂದು ಹೇಳಿದ್ದರು. ಅದರಂತೆಯೇ ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ಮುನಿರತ್ನಗೆ ಅನಾರೋಗ್ಯವಿದೆ ಎಂದು ವೈದ್ಯರು ರಿಪೋರ್ಟ್ ಕೊಟ್ಟಿದ್ದರು.
ಸಧ್ಯ ಈಗ ಶಾಸಕ ಮುನಿರತ್ನರಿಗೆ ಎದೆನೋವು ಕಾಣಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.