ಚಿಕ್ಕಮಗಳೂರು: ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರಿಯಾನಿ ತಿಂದು ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 17 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಖಾಸಗಿ ಕಾರ್ಯಕ್ರಮಕ್ಕೆಂದು ಬಿರಿಯಾನಿ ಸಿದ್ಧಪಡಿಸಲಾಗಿತ್ತು. ಆದರೆ, ಸಂತ್ರಸ್ತರು ಕಾರ್ಯಕ್ರಮದ ನಂತರ ಉಳಿದಿದ್ದ ಬಿರಿಯಾನಿಯನ್ನು ಸೋಮವಾರ ಸೇವಿಸಿ ಅಸ್ವಸ್ಥರಾಗಿದ್ದಾರೆ.
ತಂಗಳು ಬಿರಿಯಾನಿ ಸೇವಿಸಿದ ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ವಾಂತಿ ಮತ್ತು ಭೇದಿ ಲಕ್ಷಣಗಳನ್ನು ಹೊಂದಿದ್ದರು. ರೋಗಲಕ್ಷಣಗಳು ಉಲ್ಬಣಗೊಳ್ಳುತ್ತಿದ್ದಂತೆ, ಸಂತ್ರಸ್ತರನ್ನು ಆಂಬ್ಯುಲೆನ್ಸ್‌ನಲ್ಲಿ ಕಡೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಚಿಕಿತ್ಸೆ ನೀಡಿದ ನಂತರ, ಸಂತ್ರಸ್ತರು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಫುಡ್ ಪಾಯಿಸನ್ ಪ್ರಕರಣವಿರಬಹುದು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಆಸ್ಪತ್ರೆಗೆ ಭೇಟಿ ನೀಡಿದರು.