ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಝೈದ್ ಖಾನ್ ಅವರು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ನಟ ಝೈದ್ ಖಾನ್ ಹೇಳಿದರು.
ಇದೇ ವೇಳೆ ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ಬನಾರಸ್ ಅನ್ನು ಬಾಯ್ಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಜಮೀರ್ ಅವರ ಮಗ ಅನ್ನೋ ಕರ್ಮಕ್ಕೆ ನನ್ನನ್ನು ದ್ವೇಷ ಮಾಡುವ ರಾಜಕೀಯ ಪ್ರೇರಿತ ಜನರಿಗೆ ನಾನು ಏನನ್ನೂ ಹೇಳಬಯಸುವುದಿಲ್ಲ. ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ಪ್ರತಿಕ್ರಿಯಿಸಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.
🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನೂ ನೋಡಿ: ಸತ್ತವರ ಸಂಬಂಧಿಕರಿಗೆ, ಕುಟುಂಬದವರಿಗೆ ತಮ್ಮವರ ಸಾವಿಗೆ ನಿಜ ಕಾರಣ ಏನು ಎಂಬುದು ಗೊತ್ತಿದೆ. ಆದರೆ ಆರೋಗ್ಯ ಮಂತ್ರಿ ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ಸುಳ್ಳು ಹೇಳಿದ್ದರು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.