ನವದೆಹಲಿ : ನೀಟ್ ಪರೀಕ್ಷೆಯಲ್ಲಿ (NEET UG 2026) ನಡೆದಿರುವ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಪ್ರತಿಭಟನೆಗಳು (Protest) ತೀವ್ರ ಸ್ವರೂಪ ಪಡೆದುಕೊಂಡಿವೆ. ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆ ಮತ್ತು ಸಂಸತ್ ಚಲೋ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದೆ. ಅನೇಕ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಉದ್ವಿಗ್ನ ವಾತಾವರಣದ ಮಧ್ಯೆಯೇ ಕಾಕ್ರೋಚ್ ಜನತಾ ಪಾರ್ಟಿಯ (CJP) ಪ್ರಮುಖ ಪ್ರತಿನಿಧಿಗಳಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕ್ಕಾ ಅವರು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಅವರನ್ನು ಭೇಟಿ ಮಾಡಿದ್ದಾರೆ.
ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಕಾಯ್ದ ನಂತರ ನಡೆದ ಸುಮಾರು ಹತ್ತು ನಿಮಿಷಗಳ ಈ ಭೇಟಿಯಲ್ಲಿ, ಸಿಜೆಪಿ ನಾಯಕರು ತಮ್ಮ ಪ್ರಮುಖ ಬೇಡಿಕೆಗಳಿದ್ದ ಪತ್ರವನ್ನು ಸಚಿವರಿಗೆ ಹಸ್ತಾಂತರಿಸಿದರು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಪರೀಕ್ಷಾ ವೈಫಲ್ಯಗಳ ಸಂಪೂರ್ಣ ನೈತಿಕ ಹೊಣೆಯನ್ನು ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಸಿಜೆಪಿ ನಿಯೋಗ ಸಚಿವರೆದುರು ಬಲವಾಗಿ ಒತ್ತಾಯಿಸಿದೆ.
ಇದರೊಂದಿಗೆ, ಪರೀಕ್ಷಾ ಗೊಂದಲಗಳಿಂದ ತೀವ್ರ ನಿರಾಶೆ ಮತ್ತು ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಸಂತ್ರಸ್ತ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಧನ ನೀಡಬೇಕು. ಮುಂದಿನ ದಿನಗಳಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ, ಪ್ರಸ್ತುತ ನಡೆಯುತ್ತಿರುವ ಹೋರಾಟವನ್ನು ದೇಶದಾದ್ಯಂತ ಇನ್ನಷ್ಟು ವ್ಯಾಪಕಗೊಳಿಸುವುದಾಗಿ ಸಿಜೆಪಿ ನಾಯಕರು ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
