Home ಬೆಂಗಳೂರು ಕೇಂದ್ರ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ರೇಷನ್‌ ಕಾರ್ಡ್‌ ರದ್ದುಗೊಳಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಕೇಂದ್ರ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ರೇಷನ್‌ ಕಾರ್ಡ್‌ ರದ್ದುಗೊಳಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

0

ಬೆಂಗಳೂರು: ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಸಭೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದರು.

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದೂ ಅವರು ಸಭೆಗೆ ತಿಳಿಸಿದರು.

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ.

ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಅವರು ಸೂಚಿಸಿದರು.

ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ.

You cannot copy content of this page

Exit mobile version