Tuesday, February 11, 2025

ಸತ್ಯ | ನ್ಯಾಯ |ಧರ್ಮ

ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿ, ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ.

https://www.facebook.com/share/p/1BGEHbe1SV

ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ ಎಂದಿದ್ದಾರೆ.

Read more: ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. 2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಬಿಜೆಪಿ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾ.ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page