ಬೆಂಗಳೂರು: ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮಿ ಯೋಜನೆಯ ಸಹಾಯಧನವನ್ನು ಖಾಸಗಿ ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲ ಬಾಕಿ ಹೆಸರಿನಲ್ಲಿ ಬಲವಂತವಾಗಿ ಕಡಿತ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಈ ಅನಧಿಕೃತ ಕ್ರಮಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಈ ಬಗ್ಗೆ ಸಿಎಂ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಸಿಎಂ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಕ್ತ ನಿರ್ದೇಶನ ನೀಡಿದರು.
ಇದನ್ನನುಸರಿಸಿ ಮುಖ್ಯಮಂತ್ರಿ ಕಾರ್ಯದರ್ಶಿ ಗೃಹ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಪಾತ್ರ ವಹಿಸುತ್ತಿದ್ದು, ಪ್ರತಿ ತಿಂಗಳು ₹2000 ಸಹಾಯಧನ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಸ್ತ್ರೀ ಶಕ್ತಿ ಸಂಘಗಳು ಈ ಹಣವನ್ನು ಸಾಲದ ಬಾಕಿ ಅಥವಾ ಬಡ್ಡಿ ಹೆಸರಿನಲ್ಲಿ ಅನಧಿಕೃತವಾಗಿ ಕಡಿತ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ರೀತಿಯ ಅನ್ಯಾಯಕ್ಕೆ ತಡೆಹಿಡಿಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದ್ದರಿಂದ, ಸರ್ಕಾರ ಇದೀಗ ಗಂಭೀರ ಕ್ರಮಕ್ಕೆ ಮುಂದಾಗಿದೆ.
