Home ಬೆಂಗಳೂರು ಕೇಂದ್ರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು, ಮೇ 15: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಲೆಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ ಒತ್ತಾಯ

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಬೆಲೆಯೇರಿಕೆಯಿಂದ ದಿನನಿತ್ಯದ ವಸ್ತುಗಳೂ ತುಟ್ಟಿ

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.

ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದರು.

ಎಸ್ ಐ ಆರ್ ಪ್ರಕ್ರಿಯೆ

ಕರ್ನಾಟಕದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಪ್ರಾರಂಭವಾಗಲಿರುವ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದರು.

You cannot copy content of this page

Exit mobile version