ಬೆಂಗಳೂರು: “ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು
ಜಂಗಮವಾದರೂ ಕಾಯಕದಿಂದಲೇ ವೇಷಪಾಶ ಹರಿವುದು” ಎನ್ನುವ
ವಚನಕಾರ ನುಲಿಯ ಚಂದಯ್ಯ ಅವರ ವಚನದೊಂದಿಗೆ ಕಾರ್ಮಿಕ ಇಲಾಖೆಗೆ ಈ ವರ್ಷ ಎತ್ತಿಟ್ಟಿರುವ ಹಣಕಾಸಿನ ಕುರಿತು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳನ್ನು ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮುಖಾಂತರ ನಿರ್ವಹಿಸಲಾಗುವುದು.
ಇದಕ್ಕೆ ಒಟ್ಟಾರೆ 750 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು 2025-2026ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿದೆ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ನೀಡುತ್ತಿರುವ ಶೈಕ್ಷಣಿಕ, ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಸರ್ಕಾರದ ವತಿಯಿಂದ ನೀಡುತ್ತಿರುವ ಧನಸಹಾಯವನ್ನು ದ್ವಿಗುಣಗೊಳಿಸಲಾಗಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, Ex-gratia ಮೊತ್ತವನ್ನು 75,000 ರೂ.ನಿಂದ 1.5 ಲಕ್ಷ ರೂ.ಗೆ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ಪರಿಹಾರದ ಮೊತ್ತವನ್ನು 5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಹೆಚ್ಚಿಸಲಾಗುವುದು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ. ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ಹೃದ್ರೋಗ ಮತ್ತು ಕ್ಯಾನ್ಸರ್ ಖಾಯಿಲೆಗಳಿಗೆ 5 ಲಕ್ಷ ರೂ.ವರೆಗೆ ಮತ್ತು ಇತರೆ ಖಾಯಿಲೆಗಳಿಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪೂರಕವಾಗಿ ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ ನಿಗದಿಪಡಿಸಲಾಗುವುದು. ಇದರಡಿ ಆಸ್ಪತ್ರೆಗಳ ಶುಚಿತ್ವ, ಪರಿಕರಗಳ ಖರೀದಿ, ತುರ್ತು ವಿಭಾಗಗಳ ನವೀಕರಣ, ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.