ವಂದೇ ಮಾತರಂಗೆ ಅಪಮಾನ ಆರೋಪ: ಕರ್ನಾಟಕದ ಬೆನ್ನಲ್ಲೇ ದೆಹಲಿಯಲ್ಲೂ ಸೋನಿಯಾ ಗಾಂಧಿ ವಿರುದ್ಧ ದೂರು

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ‘ವಂದೇ ಮಾತರಂ’ ರಾಷ್ಟ್ರಗೀತೆಗೆ ಕಥಿತವಾಗಿ ಅಪಮಾನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕದ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ದೂರು ದಾಖಲಾಗಿದೆ.

ದೆಹಲಿಯ ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ವಕೀಲರೊಬ್ಬರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ದೂರು ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕೂ ಮುನ್ನ ಕರ್ನಾಟಕದ ಮಂಗಳೂರಿನಲ್ಲಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವವರು ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.

ಆಗಸ್ಟ್ 15 ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ವಂದೇ ಮಾತರಂ ಗೀತೆಯ ಆರಂಭಿಕ ಭಾಗ ಮುಗಿಯುತ್ತಿದ್ದಂತೆ ಸೋನಿಯಾ ಗಾಂಧಿ ಅವರು ಗಾಯನ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ ಹಾಗೂ ರಾಹುಲ್ ಗಾಂಧಿ “ನಾವು ವಂದೇ ಮಾತರಂ ಹಾಡುತ್ತಿಲ್ಲ” ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಅರ್ಜಿದಾರರು ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ದಾಖಲಾಗಿರುವ ದೂರಿನ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ ಮೆಟ್ಟಿಲೇರುವುದಾಗಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಸಿದ್ದಾರೆ. ಆದರೆ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್, ಕಾರ್ಯಕ್ರಮದಲ್ಲಿ ವಂದೇ ಮಾತರಂ ಸರಿಯಾಗಿ ಹಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸೋನಿಯಾ ಗಾಂಧಿ ಸೂಚನೆ ನೀಡಿದ್ದರೇ ಹೊರತು ರಾಷ್ಟ್ರಗೀತೆಗೆ ಯಾವುದೇ ಅಪಮಾನ ಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು