Saturday, January 17, 2026

ಸತ್ಯ | ನ್ಯಾಯ |ಧರ್ಮ

ಬಳ್ಳಾರಿಯಲ್ಲಿ ಜ.16 ರಾತ್ರಿ ರಿಂದ ಜ.18 ಬೆಳಿಗ್ಗೆವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಆದೇಶ

ಬಳ್ಳಾರಿ ನಗರದಲ್ಲಿ ಜ.17ರಂದು ಬೆಳಿಗ್ಗೆ 10.30 ಗಂಟೆಗೆ ಎಪಿಎಂಸಿ ಕೃಷಿ ಮಾರುಕಟ್ಟೆಯ ಆವರಣದಲ್ಲಿರುವ ಕವರ್ಡ್ ಆಕ್ಷನ್ ಪ್ಲಾಟ್‌ಫಾರಂನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆಯ ಹಿನ್ನೆಲೆಯಲ್ಲಿ, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜ.16ರ ರಾತ್ರಿ 10 ಗಂಟೆಯಿಂದ ಜ.18ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ, ಮದ್ಯದಂಗಡಿಗಳು ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ನಾಗೇಂದ್ರ ಪ್ರಸಾದ್.ಕೆ ಅವರು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಬಳ್ಳಾರಿ ನಗರದಲ್ಲಿ ನಡೆದ ಗುಂಪು ಘರ್ಷಣೆಯ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿದ್ದು, ಸಭೆಯು ಶಾಂತಿಪೂರ್ಣವಾಗಿ ನಡೆಯುವಂತೆ ಸಾಕಷ್ಟು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬಂದೋಬಸ್ತ್ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆದರೆ ಈ ಆದೇಶವು ರಾಜ್ಯದ ವಿವಿಧ ಕೆ.ಎಸ್.ಬಿ.ಸಿ.ಎಲ್ ಡಿಪೊಗಳಿಗೆ ಡಿಸ್ಟಿಲರಿಗಳಿಂದ ದಾಸ್ತಾನು ವಿಲೇವಾರಿ ಮಾಡುವ ಕಾರ್ಯಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page