ವಿಧಾನ ಪರಿಷತ್ ಉಪ ಸಭಾಪತಿ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಎರಡೂ ಸ್ಥಾನಗಳಿಗೆ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಿತು.

ವಿಧಾನ ಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಾಯಕಿ ಉಮಾಶ್ರೀ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಬಿ.ಕೆ. ಹರಿಪ್ರಸಾದ್, ಕೆ.ಸಿ. ನಾರಾಯಣಗೌಡ (ಪುಟ್ಟರಾಜು), ಗೋವಿಂದರಾಜು, ಶಿವಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದು ಉಮಾಶ್ರೀ ಅವರಿಗೆ ಶುಭಾಶಯ ಕೋರಿದರು.

ಇದೇ ಸಂದರ್ಭದಲ್ಲಿ ವಿಧಾನಸಭೆಯ ಉಪ ಸಭಾಧ್ಯಕ್ಷ (ಡೆಪ್ಯೂಟಿ ಸ್ಪೀಕರ್) ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಂಕಾಳ್ ವೈದ್ಯ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಚಿವರಾದ ಲಕ್ಷ್ಮಣ ಸವದಿ, ಎಚ್.ಸಿ. ಬಾಲಕೃಷ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹಾಗೂ ಶಾಸಕರಾದ ಶಿವರಾಂ ಹೆಬ್ಬಾರ್, ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವು ಶಾಸಕರು ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು