ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರವು ಯುಪಿಎ ಅವಧಿಯ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಜಾರಿಗೆ ತಂದಿರುವ ಹೊಸ ‘ಜಿ ರಾಮ್ ಜಿ’ (VB G RAM G) ಕಾಯ್ದೆಯ ವಿರುದ್ಧ ದೇಶವ್ಯಾಪಿ ಬೃಹತ್ ಪ್ರತಿಭಟನೆ ನಡೆಸುವ ಕುರಿತು ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳಲಾಗುವುದು.
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಪ್ರಮುಖವಾಗಿ, ಮನ್ರೇಗಾ ಹೆಸರನ್ನು ಬದಲಾಯಿಸಿರುವ ಕ್ರಮವನ್ನು “ಮಹಾತ್ಮಾ ಗಾಂಧಿಯವರಿಗೆ ಮಾಡಿದ ಅವಮಾನ” ಎಂದು ಕಾಂಗ್ರೆಸ್ ಕಿಡಿಕಾರಿದ್ದು, ಜಿಲ್ಲಾ ಕೇಂದ್ರಗಳಿಂದ ಹಿಡಿದು ಹಳ್ಳಿಗಳವರೆಗೆ ಪ್ರತಿಭಟನೆಯನ್ನು ಕೊಂಡೊಯ್ಯಲು ಪಕ್ಷವು ರೋಡ್‌ಮ್ಯಾಪ್ ಸಿದ್ಧಪಡಿಸುತ್ತಿದೆ.
ಈ ಸಭೆಯು ಇತ್ತೀಚಿನ ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ನಂತರ ನಡೆಯುತ್ತಿರುವ ಮೊದಲ ಉನ್ನತ ಮಟ್ಟದ ಭೇಟಿಯಾಗಿದ್ದು, ಅಲ್ಲಿನ ಹಿನ್ನಡೆಗೆ ಕಾರಣಗಳನ್ನು ವಿಶ್ಲೇಷಿಸಲಾಗುವುದು. ಅದರೊಂದಿಗೆ ಮುಂದಿನ ವರ್ಷದ ಮೊದಲಾರ್ಧದಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ಕಾರ್ಯತಂತ್ರಗಳನ್ನು ರೂಪಿಸುವುದು ಸಭೆಯ ಪ್ರಮುಖ ಅಜೆಂಡಾವಾಗಿದೆ. ಆಯಾ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆಯೂ ಇಲ್ಲಿ ಪ್ರಾಥಮಿಕ ಚರ್ಚೆಗಳು ನಡೆಯಲಿವೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯಲ್ಲಿ ಭಾಗವಹಿಸಲು ಈಗಾಗಲೇ ದೆಹಲಿಗೆ ತಲುಪಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು, ರಾಜ್ಯ ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಸಭೆಯ ನಂತರ ಡಿಸೆಂಬರ್ 28 ರಂದು ಕಾಂಗ್ರೆಸ್ ಪ್ರತಿಷ್ಠಾಪನಾ ದಿನದ ಅಂಗವಾಗಿ ದೇಶಾದ್ಯಂತ ಗ್ರಾಪಂ ಮತ್ತು ವಾರ್ಡ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ವಿಶೇಷ ಕಾರ್ಯಕ್ರಮಗಳ ಬಗ್ಗೆಯೂ ನಾಯಕರು ಚರ್ಚಿಸಲಿದ್ದಾರೆ.
