ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯ ಹಿನ್ನೆಲೆಯಲ್ಲಿ ‘INDIA’ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ, ದೆಹಲಿಯ ಲೋಕಸಭಾ ಕ್ಷೇತ್ರಗಳ ಸ್ಪರ್ಧೆ ವಿಚಾರದಲ್ಲಿ ಸ್ವತಂತ್ರ ಸ್ಪರ್ಧೆಗೆ ನಿರ್ಧರಿಸಿವೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ದೆಹಲಿ ನಾಯಕರು ಅಭಿಪ್ರಾಯ ಪಟ್ಟಿದ್ದು, ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಸಖ್ಯ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿವೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಅಧ್ಯಕ್ಷತೆಯಲ್ಲಿ ನಡೆದ ದೆಹಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಎಲ್ಲಾ ನಾಯಕರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವ ಬಗ್ಗೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ರಾಜ್ಯದ 7 ಲೋಕಸಭಾ ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೆಹಲಿ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ತಯಾರಾಗಲು ನಮಗೆ ತಿಳಿಸಲಾಗಿದೆ. ಹೀಗಾಗಿ ನಾವು ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಚುನಾವಣೆಗೆ ಇನ್ನು ಕೇವಲ ಏಳು ತಿಂಗಳುಗಳು ಉಳಿದಿವೆ ಮತ್ತು ಎಲ್ಲಾ ಏಳು ಸ್ಥಾನಗಳಿಗೆ ತಯಾರಿ ನಡೆಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸೂಚಿಸಲಾಗಿದೆ” ಎಂದು ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಹೇಳಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಸತತ ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ ದೆಹಲಿಯ 40 ನಾಯಕರು ಭಾಗವಹಿಸಿದ್ದರು, ಅವರು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಮಾತುಕತೆಗಳು ದೆಹಲಿಯಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸುವತ್ತ ಗಮನ ಹರಿಸಿವೆ” ಎಂದು ಅವರು ಹೇಳಿದರು.
AAP ಪಕ್ಷ INDIA ಮೈತ್ರಿಕೂಟದ ಭಾಗವಾಗಿದ್ದರೂ ಸ್ಥಳೀಯವಾಗಿ ನಾವು ವಿರೋಧಿಗಳೇ. ನಮ್ಮ ನಮ್ಮ ಪ್ರಾಬಲ್ಯ ತೋರಿಸಲು ಇದು ಸ್ಪಷ್ಟ ಸಮಯ. ಹಾಗಾಗಿ ಅರವಿಂದ್ ಕೇಜ್ರಿವಾಲ್ ವಿರೋಧ ವ್ಯಕ್ತಪಡಿಸಿದರೂ ನಾವು(ಕಾಂಗ್ರೆಸ್) ಸ್ವತಂತ್ರವಾಗಿ ಸ್ಪರ್ಧಿಸುವುದು ಸೂಕ್ತ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.