ರಾಜ್ಯ ವಿಧಾನಸಭಾ ಚುನಾವಣೆ ನಂತರ ಹಲವು ದಿನಗಳಿಂದ ಖಾಲಿ ಉಳಿದಿದ್ದ ವಿಪಕ್ಷ ನಾಯಕನ ಸ್ಥಾನ ಹಾಗೂ ಹೊಸ ರಾಜ್ಯಾಧ್ಯಕ್ಷನ ಆಯ್ಕೆಯಿಂದ ಕಾಂಗ್ರೆಸ್ ಕಂಗೆಟ್ಟಂತೆ ಆಡುತ್ತಿದೆ ಎಂದು ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಇಂದು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಕಾಂಗ್ರೆಸ್ ಈ ವರೆಗೂ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಲೆಳೆದಿತ್ತು. ಈಗ ಮತ್ತೆ ಬಿಜೆಪಿ ಕಾಲೆಳೆಯುತ್ತಿರುವುದು ನೋಡಿದರೆ ಕಾಂಗ್ರೆಸ್ ನಾಯಕರಿಗೆ ಹೊಸ ಆತಂಕ ಶುರುವಾದಂತಿದೆ ಎಂದು ಹೇಳಿದ್ದಾರೆ.
ನಾನು ಹಾಗೂ ವಿಪಕ್ಷ ನಾಯಕರು ಒಟ್ಟಾಗಿ ಪಕ್ಷವನ್ನು ಮುನ್ನಡೆಸುತ್ತೇವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಪಕ್ಷವನ್ನು ಸುಭದ್ರವಾಗಿ ಕಟ್ಟಲು ಸಂಕಲ್ಪಿಸುತ್ತೇವೆ. ಆ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ಗೆ ಸ್ಪಷ್ಟ ಸಂದೇಶ ರವಾನಿಸಲಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕಳೆದ ಅವಧಿಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ 28 ಕ್ಕೆ 28 ಸ್ಥಾನ ಗೆಲ್ಲುವ ಗುರಿ ನಮಗಿದೆ. ಆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಮತ್ತೊಂದು ಅವಧಿಗೆ ಮುಂದುವರೆಯಲು ಬಿಜೆಪಿ ಪಕ್ಷಕ್ಕೆ ಶಕ್ತಿ ತುಂಬಲಿದ್ದೇವೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.