ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ (79) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
ಸಿದ್ದರಾಮಯ್ಯ ಸಂತಾಪ
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
