ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಆಕ್ರೋಶಗೊಂಡಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಸಂಬಂಧ ಇಂದು (ಮೇ 29, 2025) ಮಧ್ಯಾಹ್ನ 2:30ಕ್ಕೆ ಮಂಗಳೂರಿನ ಶಾದಿ ಮಹಲ್‌ನಲ್ಲಿ ಮಹತ್ವದ ಸಭೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಮಾತನಾಡಿ, “ಮೇ 27 ರಂದು ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಹತ್ಯೆಯಾದ ಘಟನೆ, ಪುನೀತ್ ರೈ ಎಂಬಾತನ ಬಂಧನದ ಬಳಿಕವೂ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಮೇಲಿನ ದಾಳಿಗಳು ಮುಂದುವರಿದಿವೆ. ಸಂಘಪರಿವಾರದ ಕೆಲವು ಮುಖಂಡರ ಪ್ರಚೋದನಕಾರಿ ಭಾಷಣಗಳಿಗೆ ಪೊಲೀಸರು ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ. ಸರ್ಕಾರ ಮತ್ತು ಗೃಹ ಇಲಾಖೆ ಈ ಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಜನ ಸಂಜೆ 7 ಗಂಟೆಗೆ ಮನೆಯಿಂದ ಹೊರಗೆ ಬರುವುದಕ್ಕೇ ಹೆದರುತ್ತಿದ್ದಾರೆ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗಿನ 300-400 ಕಾಂಗ್ರೆಸ್ ಸದಸ್ಯರು ಭಾಗವಹಿಸಿ, ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ. “ಎಷ್ಟು ಸಾವುಗಳು ಸಂಭವಿಸಬೇಕು? ಸರ್ಕಾರದ ನಿರ್ಲಕ್ಷ್ಯದಿಂದ ಸಮುದಾಯದ ಜನ ಭಯದಲ್ಲಿ ಬದುಕ ಬೇಕೇ?” ಎಂದು ಅವರು ಪ್ರಶ್ನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮೇ 30ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಸ್ಥಳೀಯ ಮುಸ್ಲಿಂ ಸಮುದಾಯದವರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ, ಮತ್ತು ಪೊಲೀಸರು 10ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿರುವುದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.