ಬಳ್ಳಾರಿ: ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದ ಬ್ಯಾನರ್ ಅಳವಡಿಕೆ ವಿಚಾರವಾಗಿ ಬಳ್ಳಾರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು, ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ಬಳ್ಳಾರಿ ಹುಸೇನ್ ನಗರದ ನಿವಾಸಿ ರಾಜಶೇಖರ್ (28) ಎಂದು ಗುರುತಿಸಲಾಗಿದ್ದು, ಆತ ತಮ್ಮ ಬೆಂಬಲಿಗನೆಂದು ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ದೃಢಪಡಿಸಿದ್ದಾರೆ.
ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಎದುರು, ಜನಾರ್ದನ ರೆಡ್ಡಿ ಮತ್ತು ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗರ ನಡುವೆ ಭಾರೀ ಹೊಡೆದಾಟ ನಡೆದಿದೆ. ಸಾವಿರಾರು ಮಂದಿ ಪಾಲ್ಗೊಂಡ ಈ ಘರ್ಷಣೆಯಲ್ಲಿ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಘಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ, ಗಾಳಿಯಲ್ಲಿ ಗುಂಡು ಹಾರಿಸುವುದರ ಜೊತೆಗೆ ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ಸಂದರ್ಭದಲ್ಲಿ ರಾಜಶೇಖರ್ ಗುಂಡೇಟಿಗೆ ಬಲಿಯಾಗಿದ್ದು, ಅವರು ಯಾರ ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
ಘಟನೆ ಬಳಿಕ ಬಳ್ಳಾರಿ ನಗರದಲ್ಲಿ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
