ಚಿತ್ರದುರ್ಗ: ಮನರೇಗಾ ಯೋಜನೆಯ ಹೆಸರು ಬದಲಾವಣೆ ವಿರೋಧಿಸಿ ಶಿಕಾರಿಪುರದಲ್ಲಿ ಪಾದಯಾತ್ರೆ ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. “ಪಾದಯಾತ್ರೆ ನಡೆಸುವ ಬದಲು ತಾಕತ್ತಿದ್ದರೆ ಶಿಕಾರಿಪುರಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಿ,” ಎಂದು ಅವರು ಡಿಕೆಶಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಮನರೇಗಾ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಅದನ್ನು ತಡೆದು ಗ್ರಾಮೀಣಾಭಿವೃದ್ಧಿಗಾಗಿ ‘ಜಿ-ರಾಮ್ ಜಿ’ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ವಿಜಯೇಂದ್ರ ಸಮರ್ಥಿಸಿಕೊಂಡರು. ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ಈ ಹೊಸ ಯೋಜನೆಯ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಒಳಜಗಳದ ಬಗ್ಗೆ ಲೇವಡಿ ಮಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಮುಂದುವರಿದಿದೆ. ಮೈಸೂರು ಹೆಲಿಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಜತೆಗಿನ ಚರ್ಚೆಯೂ ‘ಅಧಿಕಾರ ಉಳಿಸಿಕೊಳ್ಳುವ ಮತ್ತು ಅಧಿಕಾರ ಪಡೆಯುವ’ ಆತುರವನ್ನು ತೋರಿಸುತ್ತದೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
