Home ಬೆಂಗಳೂರು ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು

ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು

0

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ನಮ್ಮ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ವೇಳೆ ಗುತ್ತಿಗೆ ಕಾರ್ಮಿಕನೊಬ್ಬ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪಿಲ್ಲರ್ ಬೆಳಕಿನ ವ್ಯವಸ್ಥೆ (Pillars Lighting Works) ಕಾಮಗಾರಿಯ ಗುತ್ತಿಗೆಯನ್ನು ಖಾಸಗಿ ಸಂಸ್ಥೆಯೊಂದು ಪಡೆದಿದ್ದು, ಅದರಡಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನು ಮಧ್ಯಾಹ್ನ ಸುಮಾರು 3.52 ಗಂಟೆಗೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಬಳಿ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕೆಲಸದ ಸಂದರ್ಭದಲ್ಲಿ ಕಾರ್ಮಿಕನು ಆಕಸ್ಮಿಕವಾಗಿ ಲೈವ್ ವಿದ್ಯುತ್ ಸಂಪರ್ಕಕ್ಕೆ ಒಳಗಾದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಸಹೋದ್ಯೋಗಿಗಳು ಹಾಗೂ ಸ್ಥಳದಲ್ಲಿದ್ದ ಸಿಬ್ಬಂದಿ ಆತನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆಯ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು, ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ಯಾವುದೇ ಲೋಪವಾಗಿದೆಯೇ ಎಂಬುದರ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಬಂದ ಬಳಿಕ ಘಟನೆಗೆ ಕಾರಣವಾದ ಅಂಶಗಳು ಸ್ಪಷ್ಟವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಬಿಎಂಆರ್‌ಸಿಎಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

You cannot copy content of this page

Exit mobile version