ರಾಜ್ಯದಲ್ಲಿ ಕೋವಿಡ್ ಆತಂಕ: 32 ಸೋಂಕಿನ ಪ್ರಕರಣ ಪತ್ತೆ; ಆಂಧ್ರ ಗಡಿ ಜಿಲ್ಲೆಗಳಿಗೆ ಹೈ ಅಲರ್ಟ್

ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಹಾಗೂ ಸೋಂಕಿನಿಂದ ಸಾವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರ್ಕಾರ, ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಕಳೆದ ತಿಂಗಳು ಕೇವಲ 14 ಪ್ರಕರಣಗಳು ದಾಖಲಾಗಿದ್ದರೆ, ಈ ತಿಂಗಳಲ್ಲಿ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಕೋವಿಡ್ ಲಕ್ಷಣಗಳಿರುವ 193 ಶಂಕಿತರನ್ನು ಆರೋಗ್ಯ ಇಲಾಖೆ ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ 32 ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ 32 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಇನ್ನೊಂದೆಡೆ, ಆಂಧ್ರಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿ ಮತ್ತೊಮ್ಮೆ ಆತಂಕ ಹುಟ್ಟಿಸಿದೆ. ಅಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ, ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ವರದಿಗಳು ಆರೋಗ್ಯ ಇಲಾಖೆಯ ಕಳವಳಕ್ಕೆ ಕಾರಣವಾಗಿವೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕ ಸರ್ಕಾರ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.

ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ಭಾಗದಲ್ಲಿ ಈಗಾಗಲೇ ಬಾರ್ಡರ್ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಆರೋಗ್ಯ ತಪಾಸಣೆ ಹಾಗೂ ನಿಗಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಉದ್ಯೋಗ, ವ್ಯಾಪಾರ ಹಾಗೂ ಇತರೆ ಕಾರಣಗಳಿಗೆ ಗಡಿ ದಾಟಿ ಪ್ರತಿದಿನ ಸಾವಿರಾರು ಜನರು ಸಂಚರಿಸುವ ಹಿನ್ನೆಲೆ ವೈರಸ್ ಹರಡುವ ಸಾಧ್ಯತೆಯನ್ನು ಮನಗಂಡು ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ.

ಆದರೆ, ಸದ್ಯ ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವುದು ಹಾಗೂ ಅಗತ್ಯವಿದ್ದಲ್ಲಿ ಸಾಮಾಜಿಕ ಅಂತರ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಸೋಂಕಿನ ಪ್ರಮಾಣದಲ್ಲಿ ಯಾವುದೇ ಏರಿಳಿತ ಕಂಡುಬಂದರೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು