ಹಾಸನ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ನಗರದಲ್ಲಿ ಶುಕ್ರವಾರ ಪಾದಯಾತ್ರೆ ನಡೆಸಲಾಯಿತು. ಪಕ್ಷದ ಮುಖಂಡ ಎಂ.ಸಿ. ಡೋಂಗ್ರೆ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆ, ಸಂವಿಧಾನದ ಆಶಯಗಳ ಮೇಲಿನ ದಾಳಿ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿದರು.
ರಾಜ್ಯದಲ್ಲಿನ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಕೆಪಿಎಸ್‌ಸಿ ನೇಮಕಾತಿ ಹಗರಣಗಳ ನಿಷ್ಪಕ್ಷಪಾತ ತನಿಖೆ ನಡೆಸಿ ಪಾರದರ್ಶಕತೆ ತರಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು. ವಸತಿರಹಿತ ಕುಟುಂಬಗಳಿಗೆ ನಿವೇಶನ ಹಾಗೂ ಮನೆ ನಿರ್ಮಾಣಕ್ಕೆ ನೆರವು ನೀಡಬೇಕು. ಜಲಜೀವನ್ ಮಿಷನ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಆನೆ ಧಾಮ ನಿರ್ಮಿಸಬೇಕು. ವನ್ಯಜೀವಿಗಳಿಂದಾಗುವ ಹಾನಿಗೆ ವಿಮಾ ರಕ್ಷಣೆ ಕಲ್ಪಿಸಬೇಕು. ಮಾದಕ ದ್ರವ್ಯ ಹಾವಳಿ ತಡೆಯಬೇಕು. ರೈತರಿಗೆ ಗುಣಮಟ್ಟದ ಬೀಜ–ಗೊಬ್ಬರ ಒದಗಿಸಬೇಕು. ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
