ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮಾಂಡೌಸ್ ಚಂಡಮಾರುತದ ಎಫೆಕ್ಟ್ ಈಗ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಷಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಡಿ.13ರ ವರೆಗೂ ಮಳೆಯ ಆರ್ಭಟ ಜೋರಾಗಲಿದ್ದು, ಹವಾಮಾನ ಇಲಾಖೆಯು ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ರಾಜ್ಯದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಈಗಾಗಲೇ ಮಾಂಡೌಸ್ ಚಂಡಮಾರುತದಿಂದ ತಮಿಳುನಾಡಿನ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 65 ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಅಲ್ಲದೇ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಅತಿಯಾದ ಚಳಿ, ಗಾಳಿ ಮತ್ತು ಮಳೆ ಪರಿಣಾಮದಿಂದ ಈಗಾಗಲೇ ಅಲ್ಲಿನ ನಾಲ್ಕು ಮಂದಿ ಸಾವನ್ನಪ್ಪಿದ್ದು, ಇದೀಗ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.