ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಆಚರಣೆಗೆ ರಾಜ್ಯ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯಲಿರುವ ಮೊದಲ ಮೈಸೂರು ದಸರಾ ಇದಾಗಿರುವುದರಿಂದ, ಈ ಬಾರಿಯ ನಾಡಹಬ್ಬವನ್ನು ಇನ್ನಷ್ಟು ವೈಭವದಿಂದ ಆಚರಿಸಲು ಸರ್ಕಾರ ಸಕಲ ಸಿದ್ಧತೆ ಕೈಗೊಂಡಿದೆ.
ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ, ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಪೂರ್ವಸಿದ್ಧತಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ.
ಅಕ್ಟೋಬರ್ 11ರಂದು ಬೆಳಿಗ್ಗೆ 11:50ಕ್ಕೆ ಚಾಮುಂಡಿ ಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವವಿಖ್ಯಾತ ಜಂಬೂಸವಾರಿ ಅಕ್ಟೋಬರ್ 21ರಂದು ನಡೆಯಲಿದೆ. ಅಂದು ಸಂಜೆ 4:10ರಿಂದ 4:35ರೊಳಗೆ ಅಂಬಾರಿಯಲ್ಲಿ ವಿರಾಜಮಾನವಾಗಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದು, ಬಳಿಕ ಜಂಬೂಸವಾರಿ ಆರಂಭವಾಗಲಿದೆ.
ಮೈಸೂರು ದಸರಾ ಹಿನ್ನೆಲೆಯಲ್ಲಿ ಭದ್ರತೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರವಾಸೋದ್ಯಮ, ಸಾರಿಗೆ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸಭೆಯಲ್ಲಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ ನಾಡಹಬ್ಬವನ್ನು ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
