ಪಾಕಿಸ್ತಾನದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಭೀಕರ ಆತ್ಮಾಹುತಿ ದಾಳಿ: 23 ಸಾವು, 47ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ನಗರದ ಪ್ರಮುಖ ರೈಲ್ವೆ ನಿಲ್ದಾಣದ ಬಳಿ ಶನಿವಾರ ನಡೆದ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದು, 47ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರೈಲು ಹತ್ತಲು ನೂರಾರು ಪ್ರಯಾಣಿಕರು ನಿಲ್ದಾಣದಲ್ಲಿ ಕಾಯುತ್ತಿದ್ದ ಸಂದರ್ಭದಲ್ಲೇ ಸ್ಫೋಟ ಸಂಭವಿಸಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನಡುಗಿಹೋಗಿದ್ದು, ಸ್ಥಳದಲ್ಲಿ ನಿಲ್ಲಿಸಲಾಗಿದ್ದ 10ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.

ಸ್ಫೋಟದ ಸದ್ದು ಕೇಳುತ್ತಿದ್ದಂತೆ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ, ಪ್ರಾಣಭಯದಿಂದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದ ಮಡುವು ಹಾಗೂ ದೇಹದ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.

ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕ್ವೆಟ್ಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಜೆ ಮೇಲಿದ್ದ ವೈದ್ಯರು ಮತ್ತು ದಾದಿಯರನ್ನು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೊತ್ತುಕೊಂಡಿದೆ. ಇನ್ಫೆಂಟ್ರಿ ಶಾಲೆಯ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಸಂಘಟನೆ ಹೇಳಿಕೊಂಡಿದೆ. ಮೃತರಲ್ಲಿ ಹೆಚ್ಚಿನವರು ರಜೆಯ ನಿಮಿತ್ತ ತವರಿಗೆ ತೆರಳಲು ಸಿದ್ಧರಾಗಿದ್ದ ಪಾಕಿಸ್ತಾನ ಸೇನಾ ಸಿಬ್ಬಂದಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯನ್ನು ಪಾಕಿಸ್ತಾನದ ಪ್ರಧಾನಿ ಹಾಗೂ ಬಲೂಚಿಸ್ತಾನ್ ಪ್ರಾಂತ್ಯದ ಮುಖ್ಯಮಂತ್ರಿಗಳು ತೀವ್ರವಾಗಿ ಖಂಡಿಸಿದ್ದು, ಅಮಾಯಕರ ರಕ್ತ ಹರಿಸಿದ ಉಗ್ರರನ್ನು ಮಟ್ಟಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ದಾಳಿಯ ಬೆನ್ನಲ್ಲೇ ಇಡೀ ಕ್ವೆಟ್ಟಾ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ತನಿಖಾ ಸಂಸ್ಥೆಗಳು ದಾಳಿಕೋರರ ಪತ್ತೆಗೆ ಜಾಲ ಬೀಸಿವೆ.

Related Articles

ಇತ್ತೀಚಿನ ಸುದ್ದಿಗಳು