ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದವಿಯಿಂದ ತೆಗೆದುಹಾಕಲು ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಪಾರ್ಲಿಮೆಂಟ್‌ನ ಬಜೆಟ್ ಅಧಿವೇಶನದ ಎರಡನೇ ಹಂತದ ಮೊದಲ ದಿನವಾದ ಮಾರ್ಚ್ 9 ರಂದು ಚರ್ಚೆ ಮತ್ತು ಮತದಾನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.
ನಿಯಮಗಳ ಪ್ರಕಾರ, ಅಧಿವೇಶನದ ಮೊದಲ ದಿನವೇ ಈ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ಹೇಳಿದರು. ಓಂ ಬಿರ್ಲಾ ಅವರು ವಿರೋಧ ಪಕ್ಷಗಳ ವಿರುದ್ಧ ಸ್ಪಷ್ಟವಾಗಿ ಪಕ್ಷಪಾತದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ವಿಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿದ್ದರಿಂದ ಈ ಚರ್ಚೆ ಅನಿವಾರ್ಯವಾಗಿದೆ. ಅಂದಹಾಗೆ, ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದೆ ಎಂದು ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
