ಪುತ್ತೂರು: ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೆ ಸಂಬಳದ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕವು ಹಿರಿಯ ಕಾರ್ಮಿಕ ನಿರೀಕ್ಷಕರಾದ ಗಣಪತಿ ಹೆಗ್ಗಡೆ ಅವರಿಗೆ ಮನವಿ ಸಲ್ಲಿಸಿದೆ.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಡ ಕೂಲಿ ಕಾರ್ಮಿಕರು, ಆಟೋ ಚಾಲಕರು, ವಲಸೆಗಾರರು ಸೇರಿದಂತೆ ಸಾಕಷ್ಟು ಮಂದಿ ಇಂದಿರಾ ಕ್ಯಾಂಟೀನ್‌ನ ಸೌಲಭ್ಯವನ್ನು ಉಪಯೋಗಿಸಿಕೊಂಡು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ಸಂಬಳ ಕೊಡದೆ ವಿಳಂಬ ಮಾಡುತ್ತಿದ್ದು, ಇಂದಿರಾ ಕ್ಯಾಂಟೀನ್‌ನ ಕಾರ್ಯಚಟುವಟಿಕೆಗಳೂ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬಡ ವಿದ್ಯಾರ್ಥಿಗಳ, ಕೂಲಿ ಕಾರ್ಮಿಕರ ಹಿತ ಕಾಪಾಡದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ ಅವರ ಆದೇಶದ ಮೇರೆಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಒಂದು ವೇಳೆ ಇದೇ ರೀತಿ ವಿಳಂಬವಾಗುತ್ತಿದ್ದರೆ ಕಾರ್ಮಿಕ ಇಲಾಖೆ ಮತ್ತು ಇಂದಿರಾ ಕ್ಯಾಂಟೀನ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅಲ್ಲಿನ ಕಾಂಗ್ರೆಸ್ ಕಾರ್ಮಿಕ ಘಟಕದ ಸದಸ್ಯರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟದ ಅಧ್ಯಕ್ಷ ಶರೋನ್ ಸಿಕ್ವೇರಾ, ಪುತ್ತೂರು ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೇಶವ್ ಪಡೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.