Home ದೇಶ ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದ ದೆಹಲಿ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದ ದೆಹಲಿ ಹೈಕೋರ್ಟ್

0

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಬುಧವಾರ ಮತ್ತೊಮ್ಮೆ ವಜಾಗೊಳಿಸಿದೆ.

ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್ ಮತ್ತು ನ್ಯಾಯಮೂರ್ತಿ ದಿನೇಶ್ ಭಟ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದೆ.ಸುಪ್ರೀಂ ಕೋರ್ಟ್ ಈಗಾಗಲೇ ನೀಡಿರುವ ನಿರ್ದೇಶನಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಈ ಹಂತದಲ್ಲಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಜನವರಿ 5ರಂದು ಸುಪ್ರೀಂ ಕೋರ್ಟ್ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ವೇಳೆ, ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆ ಮುಗಿದ ಬಳಿಕ ಅಥವಾ ಒಂದು ವರ್ಷದ ನಂತರವಷ್ಟೇ ಜಾಮೀನಿಗಾಗಿ ಮತ್ತೆ ಮನವಿ ಸಲ್ಲಿಸಬಹುದು ಎಂಬ ಷರತ್ತನ್ನು ವಿಧಿಸಿತ್ತು.ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ಕೇಂದ್ರ ಸರ್ಕಾರದ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಈ ಗಲಭೆಯ ಸಂಚಿನ ಪ್ರಮುಖ ಸೂತ್ರಧಾರಿಗಳು ಎಂದು ಆರೋಪಿಸಿ ಪೊಲೀಸರು ಇವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಖಾಲಿದ್ ಸೈಫಿ, ತಾಹಿರ್ ಹುಸೇನ್ ಸೇರಿದಂತೆ ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಸೆಪ್ಟೆಂಬರ್ 2020ರಿಂದ ಉಮರ್ ಖಾಲಿದ್ ನ್ಯಾಯಾಂಗ ಬಂಧನದಲ್ಲೇ ಮುಂದುವರಿದಿದ್ದಾರೆ.ಇತ್ತೀಚೆಗೆ ಜುಲೈ 4ರಂದು ವಿಚಾರಣಾ ನ್ಯಾಯಾಲಯ ಕೂಡ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

You cannot copy content of this page

Exit mobile version