Saturday, September 14, 2024

ಸತ್ಯ | ನ್ಯಾಯ |ಧರ್ಮ

ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; 51 ಕಿಲೋಮೀಟರ್ ಮಾನವ ಸರಪಳಿ, 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು.

ಧಾರವಾಡ ಸೆ.13: ಜಿಲ್ಲೆಯಲ್ಲಿ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 51 ಕಿಲೋಮೀಟರ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಸುಮಾರು 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು.

ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವವೇ ಬಲಿಷ್ಠವಾಗದು. ಆದ್ದರಿಂದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗವಾಗಿದೆ ಎಂದು ಅವರು ಹೇಳಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದ ದೇಶದ ನಾಗರೀಕರಿಗೆ ವಿಶೇಷವಾಗಿ ರಾಜ್ಯದ ನಾಗರೀಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಸುಮಾರ 2,500 ಕಿಲೋಮೀಟರ್ ಮಾನವ ಸರಪಳಿ ರಚಿಸುವ ಮೂಲಕ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಜಿಲ್ಲಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಸಹ ಮಾನವ ಸರಪಳಿ ಕಾರ್ಯಕ್ರಮವು ಬೆಳಗಾವಿ ಜಿಲ್ಲಾ ಸರಹದ್ದು ತೇಗೂರ ಗ್ರಾಮದಿಂದ ಪ್ರಾರಂಭವಾಗಿ ಗುಳೇದಕೊಪ್ಪ, ವೆಂಕಟಾಪೂರ, ಶಿಂಗನಹಳ್ಳಿ, ಕೋಟೂರ, ಬೇಲೂರ, ಮುಮ್ಮಿಗಟ್ಟಿ. ಕೆ.ಎಂ. ನರೇಂದ್ರ, ಜುಬ್ಲಿ ಸರ್ಕಲ್‌ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಲಿದ್ದು ನಂತರ ಸಲಕಿನಕೊಪ್ಪ, ಬಾಡ, ಬೆನಕನಕಟ್ಟಿ, ನಿಗದಿ, ಬೋಮ್ಮಸಿರಿಕೊಪ್ಪ, ಮುರಕಟ್ಟಿ, ಹಳ್ಳಿಗೇರಿ, ಹುತ್ತಿಕೋಟಿ ಹಾಗೂ ಉತ್ತರ ಕನ್ನಡ ಜಿಲ್ಲೆ ಸರಹದ್ದು ಮಾವಿನಕೊಪ್ಪ ಗ್ರಾಮದ ವರೆಗೆ ಒಟ್ಟು 51 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಸೆಪ್ಟೆಂಬರ್ 15, 2024 ರಂದು ಬೆಳಿಗ್ಗೆ 9.30 ಗಂಟೆಗೆ ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಉದ್ಘಾಟಿಸುವರು. ಸಚಿವರು, ಮಾನವ ಸರಪಳಿ ನಿರ್ಮಾಣದಲ್ಲಿ ಪಾಲ್ಗೋಳ್ಳುವರು ಹಾಗೂ ನಂತರ ಅವರು ಸಾಮಾಜಿಕ ಅರಣ್ಯ ಇಲಾಖೆಯಿಂದ ಆಯೋಜಿಸಲಾದ 4000 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಇತರರು ಸೇರಿದಂತೆ ಒಟ್ಟು 79,500 ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಸರ್ಕಾರದಿಂದ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಪ್ರಮಾಣ ಪತ್ರಕ್ಕಾಗಿ http://www.democracydaykarnataka.in/ ವೆಬ್ ಸೈಟ್ ನಲ್ಲಿ ಹೆಸರು ನೋಂದಾಯಿಸಲು ತಿಳಿಸಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 16,300 ಜನ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ 51 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ ಪಾಲ್ಗೊಂಡಿರುವ ಸಾರ್ವಜನಿಕ ಅನುಕೂಲಕ್ಕಾಗಿ 10 ಕಿಲೋಮೀಟರ್ ಗೆ ಒಂದು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಊಟ ಉಪಹಾರದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ನಿಗಾವಹಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಹಾಗೂ ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಗಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪಿ.ಶುಭಾ ಅವರು ಇದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page