ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯ ಬಗ್ಗೆ ಸತತ ಅಸಮಧಾನ ವ್ಯಕ್ತಪಡಿಸುತ್ತಾ ಬಂದಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಚಿಂತನ ಮಂಥನ ಎಂಬ ಸಭೆಯನ್ನು ಅಕ್ಟೋಬರ್ 16ರಂದು ಕರೆದು ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆಯ ಬಗ್ಗೆ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ದ ಬೇಜಾವಬ್ದಾರಿಯುತ ಹೇಳಿಕೆಗಳನ್ನು ಸಿಎಂ ಇಬ್ರಾಹಿಂ ಅವರು ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ, ಪಕ್ಷದ ಹಿತದೃಷ್ಟಿಯಿಂದ ಇವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಜೆಡಿಎಸ್‌ನ ಹಿಂದಿನ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಬೋಜೇಗೌಡ ಅಕ್ಟೋಬರ್ 19 ರಂದು ನೀಡಿದ ವರದಿಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿಲ್ಲ, ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದು ವರದಿಯಲ್ಲಿ ಕಂಡುಬಂದಿದೆ,” ಎಂದು ದೇವೇಗೌಡರು ತಿಳಿಸಿದ್ದಾರೆ.
“ಸಪ್ಟೆಂಬರ್ 6 ಮತ್ತು 10 ಹಾಗೂ ಅಕ್ಟೋಬರ್ 1ರಂದು ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿತ್ತು. ಈ ಸಭೆಗಳಲ್ಲಿ ಸಿಎಂ ಇಬ್ರಾಹಿಂ ರವರು ಉಪಸ್ಥಿತರಿದ್ದರು. ನಂತರ ಸಭೆಯ ತೀರ್ಮಾನಗಳ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ.”
ಸಿಎಂ ಇಬ್ರಾಹಿಂ ಅವರ ಪಕ್ಷವಿರೋಧಿ ನಡವಳಿಕೆಗಳ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನದ(Article XX -10) ಅನ್ವಯ ಅಮಾನತ್ತು ಮಾಡಲಾಗಿದೆ ಎಂದು ಹೆಚ್‌ಡಿ ದೇವೇಗೌಡರು ತಿಳಿಸಿದ್ದಾರೆ.
ನವೆಂಬರ್ 7ರಂದು ನೀಡಿದ ಹೇಳಿಕೆಯಲ್ಲಿ ಸಿಎಂ ಇಬ್ರಾಹಿಂ, ನಾನಿನ್ನೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.
ನವೆಂಬರ್ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.