Home ಅಪಘಾತ ಪಿಕ್-ಅಪ್ ವ್ಯಾನ್ ಪಲ್ಟಿಯಾಗಿ ಎಸ್‌ಯುವಿಗೆ ಡಿಕ್ಕಿ; 12 ಕಾರ್ಮಿಕರ ಸಾವು, 20 ಮಂದಿಗೆ ಗಾಯ

ಪಿಕ್-ಅಪ್ ವ್ಯಾನ್ ಪಲ್ಟಿಯಾಗಿ ಎಸ್‌ಯುವಿಗೆ ಡಿಕ್ಕಿ; 12 ಕಾರ್ಮಿಕರ ಸಾವು, 20 ಮಂದಿಗೆ ಗಾಯ

0

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವ್ಯಾನ್ ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಎಸ್‌ಯುವಿ (SUV) ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ.

ಈ ದುರ್ಘಟನೆಯು ರಾತ್ರಿ 8:30 ರಿಂದ 9 ಗಂಟೆಯ ಸುಮಾರಿಗೆ ಸಂಭವಿಸಿದೆ. ಸುಮಾರು 35 ಕಾರ್ಮಿಕರು ಧಾರ್ ಜಿಲ್ಲೆಯ ಬಗ್ಗಾಡ್‌ನಿಂದ ಪಿಕ್-ಅಪ್ ವ್ಯಾನ್‌ನಲ್ಲಿ ಮನೆಗೆ ಮರಳುತ್ತಿದ್ದರು. ವಾಹನವು ಚಿಕ್ಲಿಯಾ ಕ್ರಾಸಿಂಗ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ಇದೇ ವೇಳೆ ಎದುರಿನಿಂದ ಬರುತ್ತಿದ್ದ ಎಸ್‌ಯುವಿಗೆ ವಾಹನವು ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆಯಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ಗೆ ರವಾನಿಸಲಾಗಿದೆ. ತಿರ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. “ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಕೇಳಿ ತೀವ್ರ ನೋವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಹೃತೂರ್ವಕ ಸಂತಾಪಗಳು” ಎಂದು ಪ್ರಧಾನಿ ತಿಳಿಸಿದ್ದಾರೆ.

ಇದೇ ವೇಳೆ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕೂಡ ದುರಂತಕ್ಕೆ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಹಾಗೂ ಇತರ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಸೂಚಿಸಿರುವ ಅವರು, ಇಂದೋರ್ ವಿಭಾಗೀಯ ಆಯುಕ್ತರು ಮತ್ತು ಐಜಿ ಅವರಿಗೆ ಚಿಕಿತ್ಸಾ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೈಲಾಶ್ ವಿಜಯವರ್ಗಿಯ ಅವರು ಕೂಡ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ಖಚಿತಪಡಿಸಿಕೊಳ್ಳಲು ಸೂಚಿಸಿದ್ದಾರೆ.

You cannot copy content of this page

Exit mobile version