ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ಹೂತು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಬೆಳ್ತಂಗಡಿ ಕಚೇರಿಯಲ್ಲಿ ದೂರುದಾರ-ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದೆ.
“ಇಲ್ಲಿಯವರೆಗೆ ದೂರುದಾರ-ಸಾಕ್ಷಿಗಳು 18 ಸ್ಥಳಗಳನ್ನು ತೋರಿಸಿದ್ದು, ಅದರಲ್ಲಿ 17 ಸ್ಥಳಗಳಲ್ಲಿ ಉತ್ಖನನ ನಡೆಸಲಾಗಿದೆ. ಎರಡು ಕಡೆ ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಆ ಸ್ಥಳಗಳಿಂದ ಸಂಗ್ರಹಿಸಲಾದ ಅಸ್ಥಿಪಂಜರಗಳು ಮತ್ತು ಮಣ್ಣಿನ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ.
ತನಿಖೆಯ ಭಾಗವಾಗಿ, ಧರ್ಮಸ್ಥಳ ಪೊಲೀಸ್ ಠಾಣೆ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಸಂಗ್ರಹಿಸಲಾದ ಮಾಹಿತಿ ಮತ್ತು ದೂರುದಾರ-ಸಾಕ್ಷಿಗಳ ಹೇಳಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.